ಬೆಂಗಳೂರು :
ಉನ್ನತ ಶಿಕ್ಷಣ ಪಡೆಯಲು ಬಯಸುವ ಸರ್ಕಾರಿ ಶಾಲಾ-ಕಾಲೇಜುಗಳ ಹೆಣ್ಣುಮಕ್ಕಳಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 12ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉನ್ನತ ಶಿಕ್ಷಣಕ್ಕೆ ಕಾಲಿಡುತ್ತಿರುವ ವಿದ್ಯಾರ್ಥಿನಿಯರಿಗಾಗಿ 'ದೀಪಿಕಾ' ಉನ್ನತ ಶಿಕ್ಷಣ ವಿದ್ಯಾರ್ಥಿವೇತನ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗಿದೆ.
ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ 2026-27ನೇ ಸಾಲಿನ ಈ ಮಹತ್ತ್ವಾಕಾಂಕ್ಷಿ ಯೋಜನೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಚಾಲನೆ ನೀಡಿದರು.
ಯೋಜನೆಯ ಪ್ರಮುಖ ಮುಖ್ಯಾಂಶಗಳು:
ವಾರ್ಷಿಕ ಆರ್ಥಿಕ ನೆರವು:
ಈ ಯೋಜನೆಯಡಿ ಅರ್ಹ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 30,000 ರೂ. ವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಕೋರ್ಸ್‌ಗಳ ವಿವರ:
ಎಂಜಿನಿಯರಿಂಗ್, ವೈದ್ಯಕೀಯ, ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ವಿವಿಧ ಪದವಿ ಹಾಗೂ ಉನ್ನತ ಶಿಕ್ಷಣದ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬಹುದು.
ಒಟ್ಟು ಸಿಗುವ ಮೊತ್ತ:
ಮೂರು ವರ್ಷದ ಪದವಿ ಕೋರ್ಸ್‌ಗೆ ಒಟ್ಟು 90,000 ರೂ.
ನಾಲ್ಕು ವರ್ಷದ ಕೋರ್ಸ್‌ಗೆ 1.20 ಲಕ್ಷ ರೂ.
ಐದು ವರ್ಷದ ವೈದ್ಯಕೀಯ ಕೋರ್ಸ್‌ಗೆ ಸುಮಾರು 1.50 ಲಕ್ಷ ರೂ. ವರೆಗೆ ಆರ್ಥಿಕ ನೆರವು ದೊರೆಯಲಿದೆ.
ಆದಾಯ, ಜಾತಿ ಹಾಗೂ ಮೆರಿಟ್ ನಿರ್ಬಂಧವಿಲ್ಲ
ಈ ವಿದ್ಯಾರ್ಥಿವೇತನ ಪಡೆಯಲು ಯಾವುದೇ ಆದಾಯ ಮಿತಿ ಇರುವುದಿಲ್ಲ. ಹಾಗೂ ಜಾತಿ, ವರ್ಗ ಅಥವಾ ಇತ್ಯಾದಿ ಯಾವುದೇ ಇತರ ಮಾನದಂಡಗಳನ್ನು ಪರಿಗಣಿಸಲಾಗುವುದಿಲ್ಲ.
ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಮತ್ತು ಸರ್ಕಾರಿ ಪಿಯು ಕಾಲೇಜಿನಲ್ಲಿ 12ನೇ ತರಗತಿ ಪೂರೈಸಿ, ಉನ್ನತ ಶಿಕ್ಷಣ ಸಂಸ್ಥೆಗೆ ಪ್ರವೇಶ ಪಡೆದಿರುವ ಎಲ್ಲ ಅರ್ಹ ವಿದ್ಯಾರ್ಥಿನಿಯರು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಅರ್ಜಿ ಸಲ್ಲಿಕೆ ಹೇಗೆ ಮತ್ತು ಕೊನೆಯ ದಿನಾಂಕ..?
ಈ ಶೈಕ್ಷಣಿಕ ಸಾಲಿನಲ್ಲಿ ವಿವಿಧ ಪದವಿ ಕಾಲೇಜುಗಳಲ್ಲಿ ಈಗಾಗಲೇ 33 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರವೇಶ ಪಡೆದಿದ್ದಾರೆ.
ಇನ್ನುಳಿದ ಅರ್ಹ ವಿದ್ಯಾರ್ಥಿನಿಯರು ಕೂಡಲೇ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆದು ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ರವರೆಗೆ ಮೊದಲ ಹಂತದ ಅವಕಾಶ ನೀಡಲಾಗಿದೆ.
ಹೆಣ್ಣುಮಕ್ಕಳ ಆರ್ಥಿಕ ಸ್ವಾವಲಂಬನೆಗೆ ಸರ್ಕಾರದ ಒತ್ತು
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ, "ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣುಮಕ್ಕಳು ಯಾವುದೇ ಹಿಂಜರಿಕೆಗೆ ಒಳಗಾಗದೆ ಸಮಾನ ಅವಕಾಶಗಳನ್ನು ಪಡೆದು, ಉನ್ನತ ಶಿಕ್ಷಣದ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ" ಎಂದರು.
ಅಲ್ಲದೆ, ಕೇವಲ ಪದವಿ ಮಾತ್ರವಲ್ಲದೆ ಎಂಎ, ಎಂಕಾಂ, ಎಂಎಸ್ಸಿ ಮುಂತಾದ ಎಲ್ಲ ಸ್ನಾತಕೋತ್ತರ ಕೋರ್ಸ್‌ಗಳಲ್ಲೂ ಹೆಣ್ಣುಮಕ್ಕಳಿಗೆ ಸುಲಭವಾಗಿ ಶಿಕ್ಷಣ ಸಿಗುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಅರ್ಹ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.


