ಉಡುಪಿ:
ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದ ಲಾರಿಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ, ಮತ್ತೊಂದು ಲಾರಿ ನಿಯಂತ್ರಣ ತಪ್ಪಿ ಭೀಕರ ಅಪಘಾತ ಸೃಷ್ಟಿಸಿರುವ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ಕು ಬೈಕ್‌ಗಳು ಸಂಪೂರ್ಣ ಜಖಂಗೊಂಡಿವೆ.
ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ.
ಘಟನೆಯ ವಿವರ
ಹಿಂದೆ ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿಯೊಂದು ಅಪಘಾತಕ್ಕೀಡಾಗಿ ಸಂಚಾರಕ್ಕೆ ತಡೆಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಲಾರಿಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿತ್ತು. ವಾಹನಗಳ ಸಂಚಾರವನ್ನು ನಿಯಂತ್ರಿಸಲು ಸ್ಥಳದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.
ಇದೇ ವೇಳೆ, ಕೇರಳದಿಂದ ಮಹಾರಾಷ್ಟ್ರದ ಕಡೆಗೆ ರಬ್ಬರ್ ತುಂಬಿಕೊಂಡು ತೆರಳುತ್ತಿದ್ದ ಮತ್ತೊಂದು ಲಾರಿ ಇಳಿಜಾರು ರಸ್ತೆಯಲ್ಲಿ ಅತಿವೇಗವಾಗಿ ಬಂದಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ಹೆದ್ದಾರಿ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಮೀಪದಲ್ಲಿದ್ದ ನಾಲ್ಕು ಬೈಕ್‌ಗಳು ನಜ್ಜುಗುಜ್ಜಾಗಿದ್ದು, ಬೈಕ್‌ನಲ್ಲಿದ್ದ ನಾಗೇಂದ್ರ ಮಹಾಲೆ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ದೊಡ್ಡ ಮಟ್ಟದ ಅನಾಹುತ ತಪ್ಪಿದ ನಿಟ್ಟುಸಿರು
ನಿಯಂತ್ರಣ ತಪ್ಪಿದ ಲಾರಿ ಗಸ್ತು ವಾಹನಕ್ಕೆ ಡಿಕ್ಕಿಯಾಗದೆ ಸ್ವಲ್ಪ ಮುಂದಕ್ಕೆ ನುಗ್ಗಿದ್ದರೆ, ಹೆದ್ದಾರಿ ಮುಂಭಾಗದಲ್ಲಿದ್ದ ಸಾರ್ವಜನಿಕರು ಹಾಗೂ ಹೋಟೆಲ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಅಪ್ಪಳಿಸಿ ಭಾರೀ ಪ್ರಾಣಹಾನಿ ಸಂಭವಿಸುವ ಸಾಧ್ಯತೆಯಿತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಗಸ್ತು ವಾಹನದ ಸಮಯೋಚಿತ ಅಡಚಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಪೊಲೀಸರ ತನಿಖೆ ಆರಂಭ
ಘಟನಾ ಸ್ಥಳಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


