ಬೆಂಗಳೂರು:
ರಾಜ್ಯದಲ್ಲಿ ಹಲವು ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಜನವರಿ ತಿಂಗಳ ಮೊದಲ ವಾರದಲ್ಲೇ ಜಿ.ಪಂ. ಮತ್ತು ತಾ.ಪಂ. ಚುನಾವಣೆಗಳನ್ನು ನಡೆಸುವ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.
ಸಚಿವ ಸಂಪುಟದ ಚರ್ಚೆಯಂತೆ, ಡಿಸೆಂಬರ್‌ನಲ್ಲೇ ಚುನಾವಣಾ ಪ್ರಕ್ರಿಯೆ ಆರಂಭಿಸಿ, ಜನವರಿ ಮೊದಲ ವಾರದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ. ಬಳಿಕ ಗ್ರಾಮ ಪಂಚಾಯತ್‌ಗಳಿಗೆ ಚುನಾವಣೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಚುನಾವಣೆಗಳು ದೀರ್ಘಕಾಲದಿಂದ ಬಾಕಿ ಉಳಿದಿವೆ. ಚುನಾವಣಾ ಪ್ರಕ್ರಿಯೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳಿಗೆ ದೊರೆಯಬೇಕಾದ ಕೇಂದ್ರ ಸರ್ಕಾರದ ಅನುದಾನದಲ್ಲೂ ತೊಂದರೆ ಉಂಟಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಗಳಿಗೆ ಹಣಕಾಸಿನ ಸಮಸ್ಯೆ ಎದುರಾಗಿರುವ ಬಗ್ಗೆ ಚರ್ಚೆ ನಡೆದಿದೆ.
ಸದ್ಯ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗಳ ವಾರ್ಡ್‌ಗಳ ಮೀಸಲಾತಿ ಕರಡು ಸಿದ್ಧವಾಗಿದ್ದು, ಚುನಾವಣಾ ಪ್ರಕ್ರಿಯೆಯನ್ನು ವೇಗಗೊಳಿಸಲು ಸರ್ಕಾರ ಉದ್ದೇಶಿಸಿದೆ. ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗದ ಮುಂದಿನ ಕ್ರಮಗಳ ಆಧಾರದ ಮೇಲೆ ಅಂತಿಮ ವೇಳಾಪಟ್ಟಿ ನಿಗದಿಯಾಗಲಿದೆ.
ಗ್ರಾಮ ಪಂಚಾಯತ್ ಚುನಾವಣೆಗಳು ಪಕ್ಷದ ಚಿಹ್ನೆಯಡಿ ನಡೆಯುವುದಿಲ್ಲ. ಹೀಗಾಗಿ ಮೊದಲ ಹಂತದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಿ, ನಂತರ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಬಗ್ಗೆ ಸರ್ಕಾರ ಒಲವು ತೋರಿದೆ.
ಈ ನಿರ್ಧಾರ ಜಾರಿಯಾದರೆ, ದೀರ್ಘಕಾಲದಿಂದ ಚುನಾವಣೆಗಾಗಿ ಕಾಯುತ್ತಿರುವ ಗ್ರಾಮೀಣ ಭಾಗಗಳಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿದ್ದು, ಸ್ಥಳೀಯ ಮಟ್ಟದಲ್ಲಿ ಚುನಾವಣಾ ಸಿದ್ಧತೆಗಳು ಆರಂಭವಾಗುವ ಸಾಧ್ಯತೆಯಿದೆ.


