Public Prime News

CLEAR VISION, TRUE MISSION

ಉಡುಪಿ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ
local-news

ಉಡುಪಿ: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ – ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ

Public Prime News

Public Prime News

Reported by Public Prime News

ಉಡುಪಿ: 
ಕನ್ನಡ ನಾಡು-ನುಡಿ, ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ 71ನೇ ಕನ್ನಡ ರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 16ರಂದು ನಡೆದ ಕನ್ನಡ ರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ
ನವೆಂಬರ್ 1ರಂದು ಉಡುಪಿಯ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಭುವನೇಶ್ವರಿ ಪೂಜೆಯೊಂದಿಗೆ ಮೆರವಣಿಗೆ
ಮುಖ್ಯ ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಅಲ್ಲಿಂದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯಲ್ಲಿ ಕರ್ನಾಟಕದ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಭಾಗವಹಿಸಲಿವೆ. ಅಲ್ಲದೆ, ವಿವಿಧ ಸರ್ಕಾರಿ ಇಲಾಖೆಗಳ ಯೋಜನೆಗಳನ್ನು ಪರಿಚಯಿಸುವ ಸ್ತಬ್ಧಚಿತ್ರಗಳು ಮೆರವಣಿಗೆಯ ಆಕರ್ಷಣೆಯಾಗಲಿವೆ.

ಪೊಲೀಸ್, ಎನ್‌ಸಿಸಿ ವಿದ್ಯಾರ್ಥಿಗಳಿಂದ ಪಥಸಂಚಲನ
ರಾಜ್ಯೋತ್ಸವದ ಅಂಗವಾಗಿ ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ, ಗೃಹರಕ್ಷಕ ದಳ, ಎನ್‌ಎಸ್‌ಎಸ್‌, ಎನ್‌ಸಿಸಿ, ಸ್ಕೌಟ್ಸ್‌ ಮತ್ತು ಗೈಡ್ಸ್‌, ಸೇವಾದಳ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದೆ. ಶಾಲಾ ವಿದ್ಯಾರ್ಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತದೆ.

ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಕಲಾತಂಡಗಳಿಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ಕನಿಷ್ಠ ಮೂರು ದಿನ ಮುಂಚಿತವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಹಾಗೂ ಗಣ್ಯರನ್ನು ಶಿಷ್ಟಾಚಾರದಂತೆ ಆಹ್ವಾನಿಸಬೇಕು. ರಾಜ್ಯೋತ್ಸವದ ಯಶಸ್ಸಿಗಾಗಿ ರಚಿಸಿರುವ ವಿವಿಧ ಸಮಿತಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕನ್ನಡದ ಹಿರಿಮೆ, ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಸಾರುವ ಈ ರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದವರು
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Share this story