ಪುತ್ತೂರು:
ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ರಾತ್ರೋರಾತ್ರಿ ನುಗ್ಗಿದ ಅಪರಿಚಿತ ಯುವಕನೊಬ್ಬ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ವಿಕೃತಿ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಸೆಪ್ಟೆಂಬರ್ 2 ರಂದು ಬೆಳಿಗ್ಗೆ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಹಾಗೂ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ವಿದ್ಯಾರ್ಥಿನಿಲಯದ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಸಲಿ ಕಥೆ ಹೊರಬಂದಿದೆ. ಅಂದು ಬೆಳಗಿನ ಜಾವ ವಿದ್ಯಾರ್ಥಿನಿಲಯದ ಆವರಣಕ್ಕೆ ಅತಿಕ್ರಮ ಪ್ರವೇಶ ಮಾಡಿದ ಯುವಕನೊಬ್ಬ, ವಿದ್ಯಾರ್ಥಿನಿಯರ ಬಟ್ಟೆಗಳನ್ನು ದೋಚಿಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಕುರಿತು ಸೆಪ್ಟೆಂಬರ್ 5 ರಂದು ಅಧಿಕೃತ ದೂರು ದಾಖಲಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)-2023 ರ ಸೆಕ್ರೆನ್ 331(4) ಹಾಗೂ 305 ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಪತ್ತೆಹಚ್ಚಿ ಸೆಪ್ಟೆಂಬರ್ 7 ರಂದು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಸೆಪ್ಟೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.


