ಬೆಳ್ತಂಗಡಿ:
ಸಾರ್ವಜನಿಕ ಸ್ಥಳದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಶನಿವಾರ ಮಧ್ಯಾಹ್ನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ನಿವಾಸಿ ಸೈಯ್ಯದ್ ಮಹಮ್ಮದ್ ಇಸಾಕ್ (61) ಎಂಬಾತ ದ್ವಿಚಕ್ರ ವಾಹನದಲ್ಲಿ ಸ್ಥಳಕ್ಕೆ ಬಂದು ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿ, ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪ್ರಕರಣ ದಾಖಲು, ತನಿಖೆ ಆರಂಭ
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 73/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 75(1)(ii), 75(1)(iv), 79 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


