ಬೆಂಗಳೂರು:
ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಒಳಗಡೆ ಮೊಬೈಲ್ ಫೋನ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಪರಾಧಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಾನೂನು ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.
ಜೈಲಿನೊಳಗೆ ನಿಷೇಧಿತ ಮೊಬೈಲ್ ಫೋನ್ ಬಳಸಿದ ಆರೋಪದ ಅಡಿಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ನ್ಯಾಯಾಲಯವು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ ಏನು.?
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಈ ಹಿಂದೆ ಕೇಂದ್ರ ಅಪರಾಧ ವಿಭಾಗದ (CCB) ಅಧಿಕಾರಿಗಳು ಜೈಲಿನ ಮೇಲೆ ದಿಢೀರ್ ತಪಾಸಣೆ ನಡೆಸಿದ್ದ ವೇಳೆ, ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಸ್ಮಾರ್ಟ್‌ಫೋನ್, ಚಾರ್ಜರ್ ಹಾಗೂ ಪೆನ್‌ಡ್ರೈವ್ ಪತ್ತೆಯಾಗಿದ್ದವು.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ಪ್ರಮುಖ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ನ್ಯಾಯಾಲಯದ ಅನುಮತಿ ಕೋರಿದ್ದರು.
ಪೊಲೀಸ್ ತನಿಖೆ ಚುರುಕು
ಸದ್ಯ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಹಾಗೂ ಮತ್ತೊಬ್ಬ ಆರೋಪಿ ಪ್ರತಾಪ್‌ನನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದೆ.
ಜೈಲಿನ ಭದ್ರತಾ ಕಾವ್ಯವನ್ನು ಮೀರಿ ಹೈ ಸೆಕ್ಯುರಿಟಿ ಜೈಲಿನೊಳಗೆ ಮೊಬೈಲ್ ತಲುಪಿಸಿದ್ದು ಯಾರು..?
ಉನ್ನತ ಮಟ್ಟದ ಭದ್ರತೆ ಹಾಗೂ ಬಿಗಿಪಹರೆ ಇರುವ ಕೇಂದ್ರ ಕಾರಾಗೃಹದಲ್ಲಿ ಇಂತಹ ಉಲ್ಲಂಘನೆಗಳು ನಡೆಯುತ್ತಿರುವುದು ರಾಜ್ಯದ ಕಾರಾಗೃಹ ವ್ಯವಸ್ಥೆಯ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮುಂಬರುವ ದಿನಗಳಲ್ಲಿ ತನಿಖೆಯಿಂದ ಇನ್ನಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ಸಾಧ್ಯತೆಯಿದೆ.


